ಜಿಲ್ಲಾ ವಾರ್ತೆ

ದ.ಕ ಜಿಲ್ಲೆಯಲ್ಲಿ ಆಗಸ್ಟ್ 6ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಜು.29 ರಿಂದ ಆಗಸ್ಟ್ 06ರ ಮಧ್ಯರಾತ್ರಿ 12 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಅವಧಿಯಲ್ಲಿ:
05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಿದೆ. ಯಾವುದೇ ಶಸ್ತ್ರಗಳು, ದೊಣ್ಣೆ, ಕತ್ತಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಸಾಗಿಸುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಸಾಗಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಜಾಥಾ ಮುಷ್ಕರ, ರಸ್ತೆ ತಡೆ ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಿಸುವಿಕೆ, ಶೇಖರಣೆ ಮಾಡುವುದು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.
ವ್ಯಕ್ತಿಗಳ ಅಥವಾ ಅವರ ಶವಗಳ, ಆಕೃತಿಗಳ ಹಾಗೂ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಕೋಮು ಸೌಹಾರ್ದಕ್ಕೆ ಧಕ್ಕೆ ಬರುವಂತಹಾ, ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಹಾಡುವುದು, ಚೇಷ್ಠ, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರೆ ಯಾವುದೇ ವಸ್ತುಗಳನ್ನು ಹಂಚುವುದು, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ, ಸದಾಚಾರ ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವಂತೆ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ ಜಿಲ್ಲಾದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ನಿಮ್ಮದೊಂದು ಉತ್ತರ